ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು.
ಸರಕಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೋಟವಾಗಬೇಕು ಎಂದು ತಿಳಿಸಿದರು.
ಗ್ರಾಮೀಣ ಅಭಿವೃದ್ಧಿ ಮತ್ತು ನಗರ ಅಭಿವೃದ್ಧಿಗೆ ವಿಸೃತ ವರದಿ ರೂಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ನಿಯಮಾನುಸಾರ ಬೇಡಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೇರ್ಪಡೆ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಶಾಸಕರಾದ ಎನ್. ಎಚ್. ಕೋನರಡ್ಡಿ, ಎಂ. ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಜಿಲ್ಲಾ ಯೋಜನಾ ಸಮಿತಿ ಸದಸಸ್ಯರು, ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







