ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.
ಸಾರಿಗೆ ವಲಯದಲ್ಲಿ ಅಪಘಾತ ಆಗಿ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತ ಆಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.
ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿ ಇದೆ. ಜಿಎಸ್ ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ ಸಿ/ ಎಸ್ ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಢ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ ಎಂದು ಹೇಳಿದರು.
ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರು ವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ರವಿಶಂಕರ್ .ಡಿ, ವಿಧಾನ ಪರಿಷತ್ತಿನ ಶಾಸಕರಾದ ಡಾ. ಯತೀಂದ್ರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯಕೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಎಸ್. ಬಿ ರವಿಕುಮಾರ್ , ಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.