ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್
ಚಾಮರಾಜನಗರ, ಆಗಸ್ಟ್ 06: ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ತಿಳಿಸಿದರು.
ಚಾಮರಾಜನಗರ ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
91 ರಷ್ಟು ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾದೀಪ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಸರ್ಕಾರದ ನೂತನ ಯೋಜನೆಗಳ ಬಗ್ಗೆ ಅಸಂಘಟಿತ ಕಾರ್ಮಿಕರು ಹೆಚ್ಚಿನ ಅರಿವು ಹೊಂದಬೇಕು ಎಂದರು.
ಜೀವನೋಪಾಯಕ್ಕಾಗಿ ಇತರೆಡೆಯಿಂದ ವಲಸೆ ಬರುವ ಕಾರ್ಮಿಕರ ಅನುಕೂಲಕ್ಕಾಗಿ ವಸತಿ ಸಮುಚ್ಚಯಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುತ್ತಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ತೆರೆಯಲಾಗಿದ್ದು, ಸಮುಚ್ಚಯದಲ್ಲಿ ಎಲ್ಲಾ ಮೂಲಸೌಕರ್ಯದೊಂದಿಗೆ 7 ಸಾವಿರ ಜನ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವು ಸಂಘಟಿತ, ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಜೀಮ್ಯಾಟೋ, ಸ್ವಿಗ್ಗಿ, ಅಮೇಜಾನ್ ನಂತಹ ಸಂಸ್ಥೆಗಳಲ್ಲಿ ಕೆಲಸಗಾರರಿಗೆ ದುಡಿಯುತ್ತಿರುವವರಿಗೆ ನೆರವಾಗಲು ಗಿಗ್ ಬಿಲ್ (ಮಸೂದೆ), ಸಿನಿಮಾ ಪರದೆಯ ಹಿಂದೆ ಕೆಲಸ ಮಾಡುವ ಮೇಕಪ್ ಕಲಾವಿದರು, ಕ್ಯಾಮೆರಾಮನ್‍ಗಳು, ಸಹಾಯಕ ನೃತ್ಯಗಾರರಿಗೆ ಅನುಕೂಲ ಕಲ್ಪಿಸಲು ಸಿನಿ ಬಿಲ್ (ಮಸೂದೆ) ಹಾಗೂ ಬಸ್, ಆಟೋ ಚಾಲಕರು, ಕ್ಲೀನರ್, ಮೆಕಾನಿಕ್‍ಗಳು ಸೇರಿದಂತೆ ಇತರರ ಕಲ್ಯಾಣಕ್ಕಾಗಿ ಸಾರಿಗೆ ಬಿಲ್ (ಮಸೂದೆ)ಗಳು ಪೂರಕವಾಗಿವೆ ಎಂದು ತಿಳಿಸಿದರು.
ರಾಜ್ಯಸರ್ಕಾರ 2 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಮೂಲೆಮೂಲೆಗೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚವಾಗಲಿದ್ದು, 5 ವರ್ಷಗಳಿಗೆ 3 ಲಕ್ಷ ಕೋಟಿ ರೂಪಾಯಿ ವ್ಯಯವಾಗಲಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಉಳಿದ ಯೋಜನೆಗಳಲ್ಲಿಯೂ ರಾಜ್ಯ ಸಹ ನಿರೀಕ್ಷಿತ ಪ್ರಗತಿ ಸಾಧಿಸಿದೆ. ತಲಾ ಆದಾಯ, ಜಿಡಿಪಿ ಯಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ. ಜಿ.ಎಸ್.ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಸಚಿವರಾದ ಸಂತೋಷ್ ಲಾಡ್ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿದರು.
ಲಿಡ್ಕರ್ ಸಂಸ್ಥೆಯ ಅಧ್ಯಕ್ಷ ಮುಂಡರಗಿ ನಾಗರಾಜು, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲ್ಲೇಶ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾದ ಎಚ್.ಜಿ. ರಮೇಶ್, ಕೆ.ಪಿ. ಜಾನಿ, ಬಸಪ್ಪ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ. ರವಿಕುಮಾರ್, ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಿ. ಭಾರತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.