ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವಕುಮಾರ ಶಾರದಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಮುದ್ದೇಬಿಹಾಳ ತಾಲೂಕಿನಲ್ಲಿ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮುದ್ದೇಬಿಹಾಳ ತಾಲೂಕಿನ ಹೆಸರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಅಕಾಡೆಮಿಯ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ರಾಜ್ಯ ಮಟ್ಟದ ವಿವಿಧ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಹಾಗೂ ಪ್ರಶಸ್ತಿಗಳನ್ನು ಗಳಿಸಿದ್ದು, ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಶಿವಕುಮಾರ ಶಾರದಳ್ಳಿ ಹೇಳಿದ್ದಾರೆ.
ಕುಂಟೋಜಿ ಗ್ರಾಮದ ಭಾವೈಕ್ಯತಾ ಹಿರೇಮಠದ ಚನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಅಪ್ಪಾಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಿದ್ಧಸಿರಿ ಬ್ಯಾಂಕ್ ರಾಜ್ಯ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಿ.ಎ.ಎಸ್. ಇಂಟರ್‌ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ಶಿವನಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪಿಎಸ್‌ಐ ವಿಜಯಕುಮಾರ ತಳವಾರ, ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ ಓಸ್ವಾಲ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಕಾಮರಾಜ ಬಿರಾದಾರ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ಚಲವಾದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.







